*ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆ ಅತೀ ಮಳೆಯಿಂದ ಹಾನಿಗೊಳಗಾಗುವ ಗ್ರಾಮಗಳ ಜನರ ಸುರಕ್ಷತೆಗೆ ಕ್ರಮ ವಹಿಸಿ*

ಗದಗ (ಕರ್ನಾಟಕ ವಾರ್ತೆ) ಜೂನ್ 20 : ಜಿಲ್ಲೆಯಲ್ಲಿ ಮುಂಗಾರು ಹಂಗಾಮು ಪ್ರಾರಂಭವಾಗಿರುವ ಹಿನ್ನೆಲೆಯಲ್ಲಿ ಸಾಕಷ್ಟು ಮಳೆಯಾಗುತ್ತಿದ್ದು ಮಳೆಯಿಂದ ಹಾನಿಗೊಳಗಾಗುವ ಗ್ರಾಮಗಳ ಸಾರ್ವಜನಿಕರ ಸುರಕ್ಷತೆಗೆ ಸ್ಥಳೀಯ ಅಧಿಕಾರಿಗಳು ಪ್ರಥಮಾದ್ಯತೆ ನೀಡಿ ಕ್ರಮ ವಹಿಸಬೇಕೆಂದು ಎಂದು ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ಅವರು ತಿಳಿಸಿದರು.ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಬೆಣ್ಣೆಹಳ್ಳ ಹಾಗೂ ನದಿಯ ಪ್ರವಾಹದಿಂದ ತೊಂದರೆಗೊಳಗಾಗುವ ಗ್ರಾಮಗಳ ಸುರಕ್ಷತೆ ಕುರಿತಂತೆ ಗಮನಹರಿಸಬೇಕು. ಜಿಲ್ಲಾ ಮಟ್ಟದ ಅಧಿಕಾರಿಗಳು ಸೇರಿದಂತೆ ಎಲ್ಲರೂ ಕೇಂದ್ರ ಸ್ಥಾನದಲ್ಲಿದ್ದು ಅತೀವೃಷ್ಟಿ, ಪ್ರವಾಹ ಪರಿಸ್ಥಿತಿ ಎದುರಾದಲ್ಲಿ ಸಮರ್ಪಕವಾಗಿ ಎದುರಿಸಬೇಕು. ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸುವ ಮೂಲಕ ಜನಜಾನುವಾರುಗಳ ಜೀವ ಹಾನಿ ತಡೆಯುವುದರೊಂದಿಗೆ ಆಸ್ತಿ ರಕ್ಷಣೆ ಮಾಡಬೇಕೆಂದು ಹೇಳಿದರು. ಅಪಾರ ಮಳೆಯಿಂದ ಬಿದ್ದ ಮಳೆ ನೀರು ಚರಂಡಿ ಹಾಗೂ ಪ್ರಮುಖ ಕಾಲುವೆಗಳ ಮೂಲಕ ಸರಾಗವಾಗಿ ಮುಂದೆ ಸಾಗುವಂತೆ ಇರುವ ಗಿಡ ಕಂಟೆ, ಪ್ಲಾಸ್ಟಿಕ್ ತೆರವುಗೊಳಿಸಬೇಕು. ಇದರಿಂದ ಮಳೆ ನೀರು ಮನೆಗಳಿಗೆ ನುಗ್ಗುವುದನ್ನು ತಡೆಯಬಹುದಾಗಿದೆ. ಪ್ರವಾಹ ಪರಿಸ್ಥಿತಿಯನ್ನು ಅತ್ಯಂತ ಅಚ್ಚುಕಟ್ಟಾಗಿ ನಿರ್ವಹಣೆಗೆ ಎಲ್ಲ ಅಧಿಕಾರಿಗಳು ಸನ್ನದ್ಧರಾಗಬೇಕು. ತಗ್ಗುಪ್ರದೇಶಗಳಲ್ಲಿ ಹಾಗೂ ಶಿಥಿಲಾವಸ್ಥೆಯಲ್ಲಿರುವ ಮಣ್ಣಿನ ಮನೆಗಳಲ್ಲಿ ವಾಸಿಸುವವರನ್ನು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚಿಸಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ಅವರು ಹೇಳಿದರು. ಜಿ.ಪಂ.ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭರತ್ ಎಸ್ ಮಾತನಾಡಿ ಪ್ರವಾಹ ಪರಿಸ್ಥಿತಿ ಸಮರ್ಥವಾಗಿ ನಿಭಾಯಿಸಲು ಎಲ್ಲ ಅಧಿಕಾರಿಗಳು ಸನ್ನದ್ಧರಾಗಬೇಕು. ಅಗತ್ಯವಿದ್ದಲ್ಲಿ ಕಾಳಜಿ ಕೇಂದ್ರಗಳನ್ನು ತೆರೆಯಬೇಕು. ಸಂದರ್ಭಾನುಸಾರ ಸಾರ್ವಜನಿಕರ ಸುರಕ್ಷತೆಗೆ ವಿವಿಧ ಇಲಾಖೆಯ ಅಧಿಕಾರಿಗಳು ತಮ್ಮ ತಮ್ಮ ಜವಾಬ್ದಾರಿಗಳನ್ನು ಸಮರ್ಪಕವಾಗಿ ನಿಭಾಯಿಸಬೇಕೆಂದು ಸೂಚಿಸಿದರು.ಉಪವಿಭಾಗಾಧಿಕಾರಿ ಗಂಗಪ್ಪ ಎಂ ಮಾತನಾಡಿ ಪ್ರವಾಹ ಪರಿಸ್ಥಿತಿ ನಿರ್ವಹಣೆಗೆ ಈಗಾಗಲೇ ಪೂರ್ವಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದರು.ಸಭೆಯಲ್ಲಿ ್ಲಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ ಅತೀವೃಷ್ಟಿಯಿಂದ ಹಾನಿಯಾದ ಮನೆ, ಶಾಲೆ, ಬೆಳೆ ಹಾನಿ ವಿವರಗಳ ಕುರಿತು ಚರ್ಚಿಸಲಾಯಿತು. ಈ ಸಂದರ್ಭದಲ್ಲಿ ಹೆಚ್ಚುವರಿ ಜಿಲ್ಲಾ ಪೊಲೀಸ ವರಿಷ್ಟಾಧಿಕಾರಿ ಎಂ.ಬಿ.ಸAಕದ, ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ, ಉಪ ಅರಣ್ಯ ಸಂರಕ್ಷಣಾಧಿಕಾರಿ ಸಂತೋಷ್ ಕೆ., ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಸನಗೌಡ ಕೊಟ್ಟೂರ, ಜಂಟಿ ಕೃಷಿ ನಿರ್ದೇಶಕಿ ತಾರಾಮಣಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ಎಸ್.ನೀಲಗುಂದ, ತಹಶೀಲ್ದಾರರು, ಕಾರ್ಯನಿರ್ವಾಹಕ ಅಧಿಕಾರಿಗಳು, ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು, ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು

Leave a Reply

Your email address will not be published. Required fields are marked *