
*ವಿದ್ಯಾರ್ಥಿಗಳು ಏಕಾಗ್ರತೆಯಿಂದ ಅಭ್ಯಾಸ ಮಾಡಿ ಗುರಿ ಸಾಧನೆ ಮಾಡುವ ಜೊತೆಗೆ ನಾಯಕತ್ವ ಗುಣಗಳನ್ನು ಮೈಗೂಡಿಸಿಕೊಂಡು ಸಮಾಜಮುಖಿಯಾಗಿ ಹೆಜ್ಜೆ ಹಾಕಬೇಕು ಎಂದು ಶಿಕ್ಷಣ ತಜ್ಞೆ ಬೆಂಗಳೂರಿನ ಡೆಲ್ಲಿ ಪಬ್ಲಿಕ್ ಸ್ಕೂಲ್ ನ ಪ್ರಾಂಶುಪಾಲೆ ಮಂಜು ಶರ್ಮ ಹೇಳಿದರು*.ಅವರು ಕೃಷ್ಣರಾಜಪೇಟೆ ಪಟ್ಟಣದ ಸ್ಕೂಲ್ ಆಫ್ ಇಂಡಿಯಾ ಶಾಲೆಯ 2025 26ನೇ ಸಾಲಿನ ವಿದ್ಯಾರ್ಥಿಗಳ ನಾಯಕತ್ವ ಪದಗ್ರಹಣ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು.ಇಂದಿನ ಮಕ್ಕಳೇ ನಾಳಿನ ಭವ್ಯ ಭಾರತದ ಸತ್ಪಜೆಗಳಾದ್ದರಿಂದ ಮಕ್ಕಳು ಬಾಲ್ಯದಿಂದಲೇ ಶಿಸ್ತು ಸಂಯಮ, ಮಾನವೀಯ ಮೌಲ್ಯಗಳು, ಪರೋಪಕಾರ ಹಾಗೂ ಸೇವಾ ಮನೋಭಾವನೆಯ ಗುಣಗಳನ್ನು ಮೈಗೂಡಿಸಿಕೊಂಡು ಸಮಾಜಮುಖಿಯಾಗಿ ಹೆಜ್ಜೆ ಹಾಕುವ ಜೊತೆಗೆ ಏಕಾಗ್ರತೆಯಿಂದ ಅಭ್ಯಾಸ ಮಾಡಿ ಸಾಧನೆ ಮಾಡಿ ತಂದೆ ತಾಯಿಗಳು ಹಾಗೂ ಶಾಲೆಗೆ ಕೀರ್ತಿ ತರುವ ವಿದ್ಯಾರ್ಥಿಗಳಾಗಿ ಹೊರಹೊಮ್ಮಬೇಕು ಎಂದು ಮಂಜು ಶರ್ಮ ಕಿವಿಮಾತು ಹೇಳಿದರು.ಮಂಡ್ಯ ಜಿಲ್ಲೆಯ ತಾಲೂಕು ಕೇಂದ್ರವಾದ ಕೃಷ್ಣರಾಜಪೇಟೆ ಪಟ್ಟಣದಲ್ಲಿ ಅಂತರಾಷ್ಟ್ರೀಯ ಗುಣಮಟ್ಟದ ಸ್ಕೂಲ್ ಆಫ್ ಇಂಡಿಯಾ ಶಾಲೆಯನ್ನು ತೆರೆಯುವ ಮೂಲಕ ತಮ್ಮ ಹುಟ್ಟೂರಿನ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ನೀಡಲು ಮುಂದಾಗಿರುವ ಕೇಂದ್ರದ ಮಾಜಿ ಸಚಿವರು ಹಾಗೂ ರಾಜ್ಯಸಭೆಯ ಮಾಜಿ ಉಪಸಭಾಪತಿಗಳಾದ ಡಾ.ಕೆ. ರೆಹಮಾನ್ ಖಾನ್ ಅವರು ಗ್ರಾಮೀಣ ಮಕ್ಕಳ ಶೈಕ್ಷಣಿಕ ಸಾಧನೆ ಹಾಗೂ ಪ್ರಗತಿಯನ್ನು ಕಂಡು ಸಂತೋಷ ಪಡುತ್ತಿದ್ದಾರೆ

. ಜಾಗತಿಕ ಜಗತ್ತಿನ ಇಂದಿನ ಸ್ಪರ್ಧಾ ಪ್ರಪಂಚದಲ್ಲಿ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ನಗರ ಪ್ರದೇಶದ ವಿದ್ಯಾರ್ಥಿಗಳೊಂದಿಗೆ ಸ್ಪರ್ಧೆ ನೀಡಿ ಸಾಧನೆ ಮಾಡಬೇಕಾದರೆ ಆಂಗ್ಲಭಾಷಾ ಜ್ಞಾನ ಮತ್ತು ಕಂಪ್ಯೂಟರ್ ಶಿಕ್ಷಣ ಜ್ಞಾನದ ಅಗತ್ಯವಿರುವುದರಿಂದ ವಿದ್ಯಾರ್ಥಿಗಳು ಮೊಬೈಲ್ ಫೋನ್ ವ್ಯಾಮೋಹದಿಂದ ದೂರವಿದ್ದು ಏಕಾಗ್ರತೆಯಿಂದ ಇಂಗ್ಲಿಷ್ ಮತ್ತು ಕಂಪ್ಯೂಟರ್ ಕಲಿಕೆಗೆ ಆಸಕ್ತಿ ತೋರಬೇಕು. ಕಳೆದ ನಾಲ್ಕು ವರ್ಷಗಳಿಂದ ನಿರಂತರವಾಗಿ ಶೇಕಡ ನೂರಕ್ಕೆ ನೂರರಷ್ಟು ಫಲಿತಾಂಶ ನೀಡಿ ಶೈಕ್ಷಣಿಕ ಪ್ರಗತಿಯನ್ನು ಸಾಧಿಸುತ್ತಿರುವ ಸ್ಕೂಲ್ ಆಫ್ ಇಂಡಿಯಾ ಶಾಲೆಯು ಈ ಸಾಲಿನಲ್ಲಿಯೂ ಎಸ್.ಎಸ್. ಎಲ್.ಸಿ ಪರೀಕ್ಷೆಯಲ್ಲಿ ನೂರರಷ್ಟು ಫಲಿತಾಂಶವನ್ನು ಪಡೆದು ಜಿಲ್ಲಾ, ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಅತ್ಯುತ್ತಮ ಸಾಧನೆಯನ್ನು ಮಾಡಬೇಕು ಎಂದು ಕರೆ ನೀಡಿದರು.ಸಮರ ಚಾರಿಟಬಲ್ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿಗಳು ಹಾಗೂ ಶಿಕ್ಷಣ ತಜ್ಞರಾದ ಶಾಜಿಯಾ ಮಕ್ಸೂದ್ ಖಾನ್ ಅವರು ವಿದ್ಯಾರ್ಥಿಗಳ ನಾಯಕತ್ವ ಪದಗ್ರಹಣ ಸಮಾರಂಭದಲ್ಲಿ ವಿಶೇಷ ಅತಿಥಿಗಳಾಗಿ ಭಾಗವಹಿಸಿ ವಿದ್ಯಾರ್ಥಿಗಳು ಹಾಗೂ ವಿದ್ಯಾರ್ಥಿನಿಯರಿಗೆ ನಾಯಕತ್ವದ ವಿವಿಧ ಪ್ರಶಸ್ತಿಗಳನ್ನು ಪ್ರಧಾನ ಮಾಡಿ ಗೌರವಿಸಿದರು.ಕೃಷ್ಣರಾಜಪೇಟೆ ಪುರಸಭೆ ಮಾಜಿ ಅಧ್ಯಕ್ಷ ಕೆ.ಗೌಸ್ ಖಾನ್, ಸ್ಕೂಲ್ ಆಫ್ ಇಂಡಿಯಾ ಶಾಲೆಯ ಪ್ರಾಂಶುಪಾಲೆ ಶೈನಿ ಮೇರಿ ಡಯಾಸ್ ಮತ್ತಿತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.ವಿದ್ಯಾರ್ಥಿಗಳು ನೀಡಿದ ಭರತನಾಟ್ಯ ಸಾಂಸ್ಕೃತಿಕ ಪ್ರದರ್ಶನ ಹಾಗೂ ಶಿಸ್ತು ಬದ್ಧವಾದ ಪಥ ಸಂಚಲನವು ಅತಿಥಿಗಳು ಹಾಗೂ ಸಾರ್ವಜನಿಕರ ಗಮನ ಸೆಳೆಯಿತು.

*ವರದಿ.ಡಾ.ಕೆ.ಆರ್.ನೀಲಕಂಠ, ಕೃಷ್ಣರಾಜಪೇಟೆ, ಮಂಡ್ಯ*.